ಬೆಂಗಳೂರು : ಸಿದ್ದರಾಮಯ್ಯ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದು ಹಾಗೂ ಡಿಕೆಶಿ ವಾದವನ್ನು ಆಲಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದೇವೆ ಎಂದೂ ತಿಳಿಸಿದ್ದಾರೆ.
ಮೇ 18ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಸುದ್ದಿಯಾಗಿತ್ತು. ಇದರ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಕಸರತ್ತು ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಡಿಕೆಶಿಗೆ ಬಿಗ್ ರಿಲೀಫ್ ; ತಡೆಯಾಜ್ಞೆ ತೆರವಿಗೆ ನಕಾರ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಂದ ಹೊರಬೀಳುತ್ತಿದ್ದಂತೆಯೇ ಮೈಸೂರು ಜಿಲ್ಲೆಯ ಸಿದ್ದರಾಮಯ್ಯನಹುಂಡಿಯಲ್ಲಿ ಸಿದ್ದರಾಮಯ್ಯ ಅವರ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ, ಸಂಭ್ರಮಾಚರಣೆ ಮಾಡಿದ್ದಾರೆ.
4ನೇ ದಿನವೂ ಸಿಎಂ ಆಯ್ಕೆ ಕಗ್ಗಂಟು
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಕರೆದು ಚರ್ಚಿಸಿದ್ದು ನಾಲ್ಕನೇ ದಿನವೂ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.