ಬೆಂಗಳೂರು : ಶಕ್ತಿ ಯೋಜನೆಯ ಲೋಗೋ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದರು.
ವಿಧಾನಸೌಧ ಮುಂಭಾಗ ಹಮ್ಮಿಕೊಂಡಿದ್ದ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೊಜನೆಗೆ ಅಧಿಕೃತವಾಗಿ ಹರಿಸು ನಿಶಾನೆ ನೀಡಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಅನಾವರಣ ಮಾಡಿದರು. ಸಮಾರಂಭದಲ್ಲಿ ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಹಿಳಾ ಸಬಲೀಕರಣಕ್ಕಾಗಿ ‘ಶಕ್ತಿ‘
ಚುನಾವಣಾ ಪೂರ್ವದಲ್ಲಿ ನಾವು ಜನತೆಗೆ ನೀಡಿದ ವಚನದಂತೆ ನಮ್ಮ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡಿ ನುಡಿದಂತೆ ನಡೆದಿದ್ದೇವೆ. ಮಹಿಳಾ ಸಬಲೀಕರಣಕ್ಕಾಗಿ ಹೊಸ ಇತಿಹಾಸ ಬರೆಯಲಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಉದ್ಯೋಗ, ಶಿಕ್ಷಣ, ಕುಟುಂಬ ನಿರ್ವಹಣೆ ಮುಂತಾದ ಜವಾಬ್ದಾರಿಯನ್ನು ನಿರ್ವಹಿಸುವ ಕಾರಣಕ್ಕಾಗಿ ನಿತ್ಯ ಸಂಚರಿಸುವ ನಾಡಿನ ಅಸಂಖ್ಯ ಮಹಿಳೆಯರ ಹೋರಾಟದ ಬದುಕಿಗೆ ನಮ್ಮ ಈ ಯೋಜನೆ ಬಲ ತುಂಬಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.