ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಪಂಚಮಸಾಲಿ ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ನಿನ್ನೆ ವಕೀಲರ ಘಟಕದ ಸಭೆಯನ್ನು ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಬೇಕು. ಮೀಸಲಾತಿ ಬಗ್ಗೆ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೇಟ್ಟಿಲು ಏರಿದೆ. ಲಿಂಗಾಯತ ಪಂಚಮಸಾಲಿ ನಿಯೋಗಕ್ಕೆ ಮಾತುಕತೆಗೆ ಆಹ್ವಾನ ಕೊಡಬೇಕು. ಸಮಾಜ ಸಿಗಬೇಕಾದ ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಒತ್ತಾಯ ಮಾಡಿದ್ದಾರೆ.
ಕೇಂದ್ರ OBC ಪಟ್ಟಿಯಲ್ಲಿ ಸೇರಿಸಬೇಕು
ಸಮುದಾಯದ ಶಾಸಕರು, ಮೀಸಲಾತಿ ಹೋರಾಟಗಾರರು ಬರ್ತಾರೆ. ಕೇಂದ್ರ ಓಬಿಸಿ ಪಟ್ಟಿಯಲ್ಲಿ ಪಂಚಮಸಾಲಿ ಸಮಾಜ ಸೇರಿಸಬೇಕು. ಲಿಂಗಾಯತ ಪಂಚಮಸಾಲಿ ಸಮುದಾಯದಕ್ಕೆ ಸ್ಪಷ್ಟ ಮೀಸಲಾತಿ ಕೊಡಬೇಕು. ಈ ನಿಟ್ಟಿನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ಪಂಚಮಸಾಲಿ ಸಮುದಾಯಕ್ಕೆ 2ಎ ಕೊಡಬೇಕೋ, 2ಡಿ ಕೊಡಬೇಕೋ ಅನ್ನೋದನ್ನ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಲಿ ಎಂದು ಶ್ರೀಗಳು ಹೇಳಿದ್ದಾರೆ.
ಇದನ್ನೂ ಓದಿ : ದುಷ್ಟ ರಾಜಕಾರಣ ಮುಂದುವರಿದರೆ ಮುಂದೆ 6 ಮತ್ತು 3 ಸೀಟ್ ಆಗಲಿದೆ : ಪ್ರಿಯಾಂಕ್ ಖರ್ಗೆ
ಐದು ಜನರಿಗೆ ಮಂತ್ರಿ ಸ್ಥಾನ ಕೊಡಬೇಕು
13 ಜನ ಪಂಚಮಸಾಲಿ ಸಮಾಜದ ಶಾಸಕರು ಗೆದ್ದು ಬಂದಿದ್ದಾರೆ. ಇದರಲ್ಲಿ ಐದು ಜನರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬ ಬೇಡಿಕೆಯಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿವಾನಂದ ಪಾಟೀಲ್ ಅವರಿಗೆ ಮಂತ್ರಿಗಿರಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ವಿನಯ ಕುಲಕರ್ಣಿ ಮತ್ತು ವಿಜಯಾನಂದ ಕಾಶಪ್ಪನ್ನವರ ಮಂತ್ರಿ ಸ್ಥಾನ ಸಿಗಬಹುದು ಎಂದು ಅವರು ತಿಳಿಸಿದ್ದಾರೆ.
ಶಿವಾನಂದ ಜಾಮದಾರ ಸಾಹೇಬ್ರು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವಿದೆ. ಮುಂದಿನ ದಿನಗಳಲ್ಲಿ ಸರ್ಕಾರವು ಅವರನ್ನ ಕರೆಸಿ ಮಾತನಾಡಬಹುದು. ನನ್ನ ಹೋರಾಟ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಿಸುವತ್ತ ಮಾತ್ರ. ಆ ಬಗ್ಗೆ ನನ್ನ ಗಮನವಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.