ಬೆಂಗಳೂರು : ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬಿಡಲಾಗಿದೆ. ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.
ವಿಳಂಬವಾಗುತ್ತಿರುವುದು ನಿಜ
ನಾನು ಯಾರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ. ಆದರೆ, ಸಲಹೆಗಳನ್ನು ಕೇಳಿದರೆ ಅವರಿಗೆ ನೀಡುತ್ತೇನೆ. ನೇಮಕಾತಿ ಬಗ್ಗೆ ಚರ್ಚೆ ನಡೆದಿದ್ದು, ವಿಳಂಬವಾಗುತ್ತಿರುವುದು ನಿಜ. ಈ ಎಲ್ಲ ವಿಚಾರಗಳ ಬಗ್ಗೆ ಕೇಂದ್ರ ನಾಯಕರು ಶೀಘ್ರವೇ ತೀರ್ಮಾನಿಸಿ ಸೂಕ್ತ ವ್ಯಕ್ತಿಗೆ ಜವಾಬ್ದಾರಿ ನೀಡಲಿದ್ದಾರೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.