ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಇಂದು 6 ಗಂಟೆ ಸುಮಾರಿಗೆ CABG (Coronary Artery Bypass Graft Surgery) ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಬೊಮ್ಮಾಯಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಕಾರ್ಡಿಯೋಥೋರಾಸಿಕ್ ಸರ್ಜನ್ ಡಾ.ವಿವೇಕ್ ಜವಳಿ ತಿಳಿಸಿದ್ದಾರೆ. ಎರಡು ಅಥವಾ ಮೂರು ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ವಿಶೇಷ ವಾರ್ಡ್ಗೆ ಸ್ಥಳಾಂತರ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಶೀಘ್ರ ಗುಣಮುಖರಾಗಿ ಬರಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.