ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ಆರ್ಟಿಕಲ್ ಅನ್ನು ತೆಗೆದು ಹಾಕಿದ್ದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಎತ್ತಿಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ: ಸರ್ಕಾರ ಪತನವಾಗುವುದು ಖಚಿತ : ಹೆಚ್‍ಡಿಕೆ ಸ್ಫೋಟಕ ಭವಿಷ್ಯ
ಜಮ್ಮು ಕಾಶ್ಮೀರ ಭಾರತ ಅವಿಭಾಜ್ಯ ಅಂಗವಾಗಿದೆ. ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ನ್ಯಾಯಾಲಯ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.
ಸೆ. 30 ರೊಳಗೆ ಚುನಾವಣೆ ನಡೆಸಲು ಆದೇಶ
ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆಗಳನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಯಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆಗಳು ನಡೆಯುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಜ್ಯತ್ವವನ್ನು ಮರುಸ್ಥಾಪಿಸಬೇಕು ಎಂದು ನಾವು ನಿರ್ದೇಶಿಸುತ್ತೇವೆ ಎಂದು ಹೇಳಿದ್ದಾರೆ.
ಆರ್ಟಿಕಲ್ 370 ರದ್ದತಿ ವಿರುದ್ಧ ವಾದ ಮಂಡಿಸಿದ ಅರ್ಜಿಗಳಲ್ಲಿ ಮುಖ್ಯವಾಗಿ ಎರಡು ಸವಾಲುಗಳನ್ನು ಎತ್ತಲಾಗಿತ್ತು. ಮೊದಲನೆಯದು ರಾಷ್ಟ್ರಪತಿ ಆದೇಶಗಳ ಸಾಂವಿಧಾನಿಕತೆಗೆ ಸಂಬಂಧಿಸಿದೆ. ಆದರೆ ಎರಡನೆಯ ಸವಾಲು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಬಗ್ಗೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪು ನೀಡಿದೆ. ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೂ ಒಳಗೊಂಡಿತ್ತು.