ಬೆಂಗಳೂರು : ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ರೈತ ಕುಟುಂಬದಿಂದ ಬಂದಿರುವ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕು ಎಂಬ ದುರುದ್ದೇಶ ಖಂಡಿತ ಇಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.
ಶಿವಾನಂದ ಪಾಟೀಲ್ ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ, ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಹೇಳಿದ್ದಾರೆ.
ರೈತರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಿ
ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪದೇ ಪದೆ ಬರಗಾಲ ಬರಲಿ ಅಂತ ರೈತರಿಗೆ ಆಸೆ. ಅವರು ಸಾಲ ಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರಕ್ಕೆ ಮುಜುಗರ ತರಿಸಿದೆ.