ರಾಯಚೂರು : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಪೊಲೀಸರು ಹನುಮಧ್ವಜ ತೆರವುಗೊಳಿಸಿರುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರಿನಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದರ್ಪದ ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ನ ದರ್ಪದ ಆಡಳಿತ ಬಹಳ ದಿನ ನಡೆಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನು ರಾಜ್ಯಾಧ್ಯಕ್ಷಯಾದ ಬಳಿಕ ಮೊದಲ ಬಾರಿಗೆ ರಾಯಚೂರಿಗೆ ಭೇಟಿ ನೀಡಿದ್ದೇನೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಯಚೂರು ಮೇಲೆ ವಿಶೇಷ ಪ್ರೀತಿ ಇದೆ. ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ನಾನು ದೊಡ್ಡ ಬದಲಾವಣೆ ಗಮನಿಸಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಕಾರ್ಯಕರ್ತರಲ್ಲಿ ಉತ್ಸವ ಕಡಿಮೆ ಆಗಿದೆ ಎಂದು ಹೇಳಿದ್ದಾರೆ.
ಜನ ಮೋದಿ ಗ್ಯಾರಂಟಿಯನ್ನು ನಂಬಿದ್ದಾರೆ
ಕಾಂಗ್ರೆಸ್ ಸರ್ಕಾರದ ಮೋಸದ ಗ್ಯಾರಂಟಿ ನಂಬಿ ವಿಧಾನಸಭೆಯಲ್ಲಿ ಮತದಾರರು ವೋಟು ನೀಡಿದ್ದಾರೆ. ಇತ್ತೀಚಿನ ದಿನಗಳ ಹಿಂದೆ ಐದು ರಾಜ್ಯದಲ್ಲಿ ಚುನಾವಣೆ ನಡೆಯಿತು. ಪಂಚರಾಜ್ಯ ಚುನಾವಣೆಯಲ್ಲಿ ಜನರು ಪ್ರಧಾನಿ ಮೋದಿ ಗ್ಯಾರಂಟಿಯೇ ಶ್ರೇಷ್ಠವೆಂದು ನಂಬಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಆರೋಪವನ್ನು ಕಾಂಗ್ರೆಸ್ ಮುಖಂಡರು ಒಪ್ಪಿಕೊಂಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.