ಹಾವೇರಿ : ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ದೇಶದಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ತಿಳಿಸಿದರು.
ಉಚಿತ ಗ್ಯಾರಂಟಿ ಮೂಲಕ ಜನರ ಕಣ್ಣಿಗೆ ಮಣ್ಣೇರಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ, ರೈತ ವಿರೋಧಿ ಸರ್ಕಾರ ಇದು. ಯುವಕರನ್ನ ಭಿಕ್ಷುಕರ ತರ ಕಾಣುತ್ತಿದೆ ಈ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.
ಸಿದ್ದರಾಮಯ್ಯ ಧಮ್ಕಿ ಹಾಕುತ್ತಿದ್ದಾರೆ
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡ್ತಿವಿ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಾರೆ. ಇದು ಮಾಗಡಿ ಶಾಸಕರ ಮಾತಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನರೇ ಧಮ್ಕಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮಕ್ಮಲ್ ಟೋಪಿ ಹಾಕುತ್ತಿದೆ
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಿಸಲು ಜನ ನಿರ್ಧಾರ ಮಾಡಿದ್ದಾರೆ. ಚುನಾವಣಾ ಗಿಮಿಕ್ ಮಾಡದೆ ದೂರದೃಷ್ಟಿ ಇರುವ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ನವರು ಮತ್ತೊಮ್ಮೆ ಮಕ್ಮಲ್ ಟೋಪಿ ಹಾಕುವ ಕೆಲಸ ಮಾಡುತ್ತಾರೆ. 130, 140 ಸ್ಥಾನದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.