ಬೆಂಗಳೂರು: ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾನೂನು ಸಮರಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇಂದು ಹೈಕೋರ್ಟ್ ಮೊರೆ ಹೋಗಲು ಸಿಎಂ ನಿರ್ಧಾರಿಸಿದ್ದು, ಪ್ರಾಸಿಕ್ಯೂಷನ್ ತಡೆ ಕೋರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ.
ಸದ್ಯ, ಬೆಂಗಳೂರಿಗೆ ಆಗಮಿಸಲಿರುವ ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಜೊತೆ ಸಿಎಂ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದಾರೆ. ಇಡೀ ಪ್ರಕರಣದ ಬಗ್ಗೆ ವಕೀಲರಿಗೆ ಸಿಎಂ ವಿವರಣೆ ನೀಡಲಿದ್ದಾರೆ. ಬಳಿಕ ಸಿದ್ದರಾಮಯ್ಯ ಪರ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.
ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇಂದು ‘ಕೈ’ ಹೋರಾಟ
ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ‘ಕೈ’ ಹೋರಾಟ:
ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೂಚನೆ ನೀಡಿದೆ.
ಇ ಮೇಲ್ ಮೂಲಕ ರಾಷ್ಟ್ರಪತಿಗಳಿಗೆ ದೂರು ಕಳುಹಿಸುವಂತೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗ್ಲೇ ಪ್ರತಿಭಟಿಸಿದ್ದಾರೆ. ಜೊತೆಗೆ ಇಂದು ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಕೆಪಿಸಿಸಿ ವತಿಯಿಂದ ಸೂಚಿಸಲಾಗಿದೆ.