ಮುಂಬೈ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಂತೆ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದು, ಕಾಂಗ್ರೆಸ್‌ನವರು ಪ್ರಸ್ತಾಪಿಸುತ್ತಿರುವ ವಿಷಯಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನನ್ನ ಸಹೋದರಿ (ಪ್ರಿಯಾಂಕಾ ಗಾಂಧಿ) ಅವರು ಚುನಾವಣಾ ಪ್ರಚಾರದ ವೇಳೆ ಪ್ರಸ್ತಾಪಿಸುತ್ತಿರುವ ವಿಷಯದ ಬಗ್ಗೆಯೇ ಪ್ರಧಾನಿ ಮೋದಿ ಅವರು ಕೂಡಾ ಮಾತನಾಡುತ್ತಿದ್ದಾರೆ ಎಂದು ನನಗೆ ಹೇಳಿರುವುದಾಗಿ ತಿಳಿಸಿದ್ದಾರೆ.
ಸಂಸತ್ತಿನಲ್ಲಿ ನಾನು ಮಾತನಾಡುವ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಡ ಅಧಿಕಾರಕ್ಕೆ ಬಂದರೇ ಜಾತಿ ಗಣತಿ ನಡೆಸಲಾಗುವುದು ಮತ್ತು ಮೀಸಲಾತಿ ಮೇಲಿನ ಶೇಕಡಾ 50ರ ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಹೇಳಿದ್ದೆ. ಆದರೆ, ಈಗ ಚುನಾವಣಾ ರ‍್ಯಾಲಿಯಲ್ಲಿ ಮೋದಿಯವರು ನನ್ನನ್ನು ‘ಮೀಸಲಾತಿ ವಿರೋಧಿ’ ಎಂದು ಹೇಳುತ್ತಿದ್ದಾರೆ. ಶೀಘ್ರದಲ್ಲೇ ‘ಜಾತಿ ಗಣತಿ’ ವಿರೋಧಿ ಎಂದೂ ಹೇಳಬಹುದು’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.