ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ. ಶನಿವಾರದಂದು ಪರೀಕ್ಷೆ ನಡೆಸಲಾಗಿದ್ದು, ಇದರಿಂದ ದೇಶದ ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಗೊಂಡಿದೆ.
ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕ ಎಂದು ಬಣ್ಣಿಸಿರುವ ರಾಜನಾಥ ಸಿಂಗ್, ‘ಇಂತಹ ಗಮನಾರ್ಹ ಸುಧಾರಿತ ಮಿಲಿಟರಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಗುಂಪಿನಲ್ಲಿ ಭಾರತವು ಗುರುತಿಸಿಕೊಂಡಿದೆ’ ಎಂದು ಹೇಳಿದ್ದಾರೆ. ಈ ಅದ್ಭುತ ಸಾಧನೆಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯನ್ನು ಹಾಗೂ ಸಶಸ್ತ್ರ ಪಡೆಯನ್ನು ರಾಜನಾಥ ಸಿಂಗ್ ಶ್ಲಾಘಿಸಿದ್ದಾರೆ.