ಮಹಾರಾಷ್ಟ್ರ: ಚುನಾವಣಾ ರ‍್ಯಾಲಿ ರದ್ದುಗೊಳಿಸಿ ದೆಹಲಿಗೆ ತೆರಳಿದ ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ಇಂದು ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್ ಆಗಿದ್ದಾರೆ.
ಮಣಿಪುರದ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಚಾರದ ಭಾಗವಾಗಿ ಅವರು, ಕೆಲವು ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸಬೇಕಿತ್ತು. ಏಕಾಏಕಿ ಅವುಗಳನ್ನು ರದ್ದುಗೊಳಿಸಿದ್ದಾರೆ.
ಮಣಿಪುರದ ಪರಿಸ್ಥಿತಿಯನ್ನು ಪರಿಶೀಲಿಸಲು ಅವರು ದೆಹಲಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ. ಮಣಿಪುರದ ಜಿರೀಬಾಮ್ ಜಿಲ್ಲೆಯಲ್ಲಿ ಸೋಮವಾರ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯಕ್ಕೆ ಸೇರಿದ ಒಂದೇ ಕುಟುಂಬದ ಮೂವರು ಮಹಿಳೆಯರು, ಎಂಟು ತಿಂಗಳ ಒಂದು ಹಾಗೂ ಎರಡೂವರೆ ತಿಂಗಳ ಎರಡು ಶಿಶುಗಳ ಮೃತದೇಹಗಳು ಪತ್ತೆಯಾದ ಹಿನ್ನಲೆ ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಿದೆ.