ಚಿಕ್ಕೋಡಿ : ಮಹಾಮಾರಿ ಕೊರೊನಾಗೆ 32 ವರ್ಷದ ವ್ಯಕ್ತಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿಯಾಗಿದ್ದ ಈತ ಉಸಿರಾಟ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದ. ಈ ವ್ಯಕ್ತಿಯನ್ನು ಜೂನ್ 27ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಈ ವ್ಯಕ್ತಿ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾನೆ. ಈತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಾಲೂಕು ಆಡಳಿತ ಕೋವಿಡ್ ಮಾರ್ಗಸೂಚಿಯಂತೆ ಗ್ರಾಮದಲ್ಲಿ ತಡರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದೆ. ಈ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರನ್ನು ದ್ವಿತೀಯ ಸಂಪರ್ಕ ಹೊಂದಿದ್ದ 12 ಜನರನ್ನು ಹೀಗೆ ಒಟ್ಟು 20 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಂಗ್ಲೆಂಡ್ ನಲ್ಲಿ ನೆಲೆಸಿದ್ದ ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು. ಜನವರಿ 15ಕ್ಕೆ ಅಥಣಿಗೆ ಮರಳಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಸೋಂಕಿತ ವ್ಯಕ್ತಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದ ಎನ್ನಲಾಗಿದೆ. ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ದಿನದಿಂದ ದಿನಕ್ಕೆ ರಣಕೇಕೆ ಹಾಕುತ್ತಿದೆ. ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದ್ದರಿಂದ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ.