ಹಾಸನ : ಜಿಲ್ಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ರಾಜ್ಯದ ಆಹಾರ ನಾಗರಿಕ ಪೂರೈಕೆ ಸರಬರಾಜು ಇಲಾಖೆ ಸಚಿವ ಕೆ ಗೋಪಾಲಯ್ಯ ಧ್ವಜಾರೋಹಣ ಮಾಡಿದರು.
ಪೊಲೀಸ್ ಪಡೆಗಳು ಕವಾಯಿತು ವಂದನೆ ಸ್ವೀಕರಿಸಿ ಮಾತನಾಡಿದ ಸಚಿವರು, ದೇಶ ಸ್ವತಂತ್ರಗೊಂಡು 74 ವರ್ಷವಾಯಿತು. ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಾಯಿ ಪಟೇಲ್ ಮೊದಲಾದವರ ಕೊಡುಗೆ ಅಪಾರ. ಅನೇಕರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಸ್ಮರಿಸಿದರು.
ದೇಶದಲ್ಲಿ ವ್ಯಾಪಕವಾಗಿ ಉಲ್ಬಣಿಸುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಮುಂದಿನ ದಿನಗಳಲ್ಲಿ ಎಲ್ಲರೂ ಮುಕ್ತವಾಗಿ ಜೀವಿಸಲು ಕೈಜೋಡಿಸಿ ದೇಶ ಸೇವೆಯನ್ನು ಮಾಡೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್ ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಪರಮೇಶ್ ಮತ್ತು ಹಿರಿಯ ಅಧಿಕಾರಿಗಳು ಈ ಸಂಭ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ಗೆ ಸನ್ಮಾನಿಸಲಾಯಿತು.
-ಪ್ರತಾಪ್ ಹಿರೀಸಾವೆ