ಶಿವಮೊಗ್ಗ : ಬೆಂಗಳೂರಿನಲ್ಲಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನಾಯಕರನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಶಾಖೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇಂದು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಅಕ್ಷರ ದಾಸೋಹ ನೌಕರರು ತಮ್ಮ 4 ತಿಂಗಳ ವೇತನ ಬಿಡುಗಡೆ ಮಾಡಲು ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಪ್ರಮುಖ ಅಧಿಕಾರಿಗಳಿಗೆ, ಮಂತ್ರಿಗಳಿಗೆ ಮನವಿ ನೀಡುತ್ತಲೇ ಬಂದಿದ್ದಾರೆ. ಈ ಅವಧಿಯಲ್ಲಿ ಸರ್ಕಾರಕ್ಕೆ ನೀಡಿದ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ಮನೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಸಂಘದ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದ್ದಾರೆ. ಹೋರಾಟ ನಡೆಸುತ್ತಿದ್ದ ಮಹಿಳೆಯರನ್ನು ಬಂಧಿಸಿರುವುದು ಗೂಂಡಾಗಿರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಕೊರೋನಾದಂತಹ ಸಂದರ್ಭದಲ್ಲಿಯೂ ನಾವು ಕೆಲಸ ಮಾಡುತ್ತಿದ್ದೇವೆ. ಶಿಕ್ಷಕರಿಗೆ ಮನೆಗೆ ಹೋಗಿ ಪಾಠ ಮಾಡಲು ಹೇಳುತ್ತಾರೆ. ನಾವು ಕೂಡ ಮನೆಗೆ ಹೋಗಿ ಊಟ ಕೊಡುತ್ತೇವೆ. ನಮಗೆ ಕೇವಲ 2700 ರೂ. ವೇತನ ನೀಡುತ್ತಿದ್ದಾರೆ. ರೂ.27,000 ಅಲ್ಲ ಸರ್ಕಾರ ನಮ್ಮ ನೋವನ್ನು ಅರ್ಥಮಾಡಿಕೊಳ್ಳಬೇಕು, ನಮ್ಮ ಬೇಡಿಕೆ ಈಡೇರದಿದ್ದರೆ ಹೋರಾಟದಲ್ಲಿ ಭಾಗವಹಿಸಿದ್ದವರನ್ನು ಬಿಡುಗಡೆ ಮಾಡದೇ ಹೋದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಮಾಡುತ್ತೇವೆ. ಅದೆಷ್ಟು ಜನರನ್ನು ಬಂಧಿಸುತ್ತಾರೋ ನಾವು ನೋಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಬಂಧಿಸಿರುವ ನಾಯಕರು ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಬಡ ನೌಕರರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.