ಮಂಗಳೂರು : ಕೋವಿಡ್ ನಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶೀಘ್ರ ಗುಣಮುಖರಾಗಲೆಂದು ಮಂಗಳೂರು ನಗರದ ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಲಾಯಿತು. ನಗರದ ಶರವು ಮಹಾಗಣಪತಿ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕುದ್ರೋಳಿ ಗೋಕರ್ಣಾನಾಥ ದೇವಸ್ಥಾನ, ಗರೋಡಿ ಬ್ರಹ್ಮ ಬೈದರ್ಕಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಬಿಜೆಪಿ ಜಿಲ್ಲಾದ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆ ಸಂದರ್ಭ ಹಲವು ಬಿಜೆಪಿ ನಾಯಕರೂ ಉಪಸ್ಥಿತರಿದ್ದು ದೇವರಲ್ಲಿ ಸಂಸದರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಿದರು. ಇನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೆಚ್ಚಿನ ಕ್ಷೇತ್ರವಾದ ಕಟೀಲು ಶ್ರೀದುರ್ಗಾಪರಮೇಶ್ವರಿ ಸನ್ನಿಧಾನದಲ್ಲೂ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಮೂಲ್ಕಿ-ಮೂಡಬಿದ್ರಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.
ಇರ್ಷಾದ್ ಕಿನ್ನಿಗೋಳಿ
ಪವರ್ ಟಿವಿ, ಮಂಗಳೂರು