ರಾಜ್ಯ : ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಚಾಮರಾಜನಗರ ವ್ಯಾಪ್ತಿಯಲ್ಲಿ 7.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ. ಕೇವಲ ಬೆರಳಣಿಕೆಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ ಎಂದು ಗಾಂಜಾ ಪ್ರಕರಣದಲ್ಲಿ ಬಂಧಿಸಲಾದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಮೇಲೆ ಸಚಿವ ಆರಗ ಜ್ಞಾನೇಂದ್ರ ಅವರು ಕಿಡಿಕಾರಿದರು.