ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ನೌಕರಿ ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಫ್ರೀಡಂಪಾರ್ಕ್ನಲ್ಲಿ ಬೃಹತ್ ಹೋರಾಟ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ 16 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಭಾಗಿಯಾಗಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಬೆಂಗಳೂರು ಸ್ವಚ್ಛ ಮಾಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.ಇನ್ನು, ಪ್ರತಿಭಟನಾ ಸ್ಥಳಕ್ಕೆ ಶಾಸಕ ಜಮೀರ್ ಅಹಮ್ಮದ್ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಈ ಸರ್ಕಾರಕ್ಕೆ ಕಿವಿ, ಕಣ್ಣು ಇಲ್ಲ. ಬಡವರ ಬಗ್ಗೆ ಕಾಳಜಿ ಇಲ್ಲ. ಪೌರ ಕಾರ್ಮಿಕರ ಬಗ್ಗೆ ಸರ್ಕಾರ ಕಿಂಚಿತ್ತೂ ತಲೆ ಕೆಡಿಸಿಕೊಂಡಿಲ್ಲ. ಕೊರೋನಾ ಸಮಯದಲ್ಲೂ ಜೀವ ಭಯ ತೊರೆದು ಇವರೆಲ್ಲ ಕೆಲಸ ಮಾಡಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಇವರ ಬೇಡಿಕೆಗಳನ್ನ ಈಡೇರಿಸಬೇಕು. ಇವರ ಬೇಡಿಕೆ ಈಡೇರಿಲ್ಲ ಅಂದ್ರೆ ನಾನು ಕೂಡ ಧರಣಿಯಲ್ಲಿ ಕೂರುತ್ತೇನೆ ಎಂದು ಜಮೀರ್ ಅಹಮ್ಮದ್ ಹೇಳಿದರು.