ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸುಳ್ಳು ಪತ್ತೆ ಹಚ್ಚುವ ಮಂಪರು ಪರೀಕ್ಷೆಗೆ ಅಸಮ್ಮತಿ ಸೂಚಿಸಿದ್ದಾರೆ.
ಈ ಸಂಬಂಧ ನ್ಯಾಯಾಲಯದಲ್ಲಿ ಮಂಪರು ಪರೀಕ್ಷೆಗೆ ಅನುಮತಿ ನೀಡಬೇಕೆನ್ನುವ ಸಿಐಡಿ ಮನವಿಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿ ಅಮೃತ್ ಪೌಲ್ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದಾರೆ. ಮಂಪರು ಪರೀಕ್ಷೆಗೆ ಅನುಮತಿ ನೀಡಬೇಕೆಂದು ಪ್ರಾಸಿಕ್ಯೂಷನ್ ಮಾಡಿದ ಮನವಿ ಬಗ್ಗೆ ಈಗ ಕೋರ್ಟ್ ತನ್ನ ನಿರ್ಧಾರ ಪ್ರಕಟಿಸಬೇಕಿದೆ.
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತಮ್ಮ ಪಾತ್ರದ ಬಗ್ಗೆ ಎಡಿಜಿಪಿ ಪೌಲ್ ಸಿಐಡಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣದ ಕುರಿತಾಗಿ ಹೇಳಿಕೆ ನೀಡಿದ ಸಿಬ್ಬಂದಿಗೆ ಪೌಲ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ವಿಚಾರ ತನಿಖೆಯ ವೇಳೆ ಗೊತ್ತಾಗಿದೆ ಎಂದು ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.
ಅಲ್ಲದೆ, ಜಾಮೀನಿನ ಮೇಲೆ ಬಿಡುಗಡೆಗೆ ಅಮೃತ್ ಪೌಲ್ ಸಲ್ಲಿಸಿರುವ ಅರ್ಜಿಗೂ ಕೂಡ ಸಿಐಡಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಹಗರಣದಲ್ಲಿ 35ನೇ ಆರೋಪಿಯಾಗಿರುವ ಅಮೃತ್ ಪೌಲ್ ಅವರ ಸಿಬ್ಬಂದಿಯು ಸಿಐಡಿ ಅಧಿಕಾರಿಗಳ ವಿಚಾರಣೆ ಸಂದರ್ಭ ಹೇಳಿಕೆ ನೀಡಿರುವುದಕ್ಕೆ ಅವರಿಗೆ ಪೌಲ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.
ಹೀಗಾಗಿ ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಆಕ್ಷೇಪಣೆಯಲ್ಲಿ ಸಿಐಡಿ ತಿಳಿಸಿದೆ.