ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 8ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಟ್ಟುಹಬ್ಬ ಹಾಗೂ ಇನ್ನಿತರ ಸಭೆ ಸಮಾರಂಭಗಳಲ್ಲಿ ಸಂಭ್ರಮಾಚರಣೆಯಲ್ಲಿ ಬಳಸುವ ಸ್ಪಾರ್ಕಲ್ ತಯಾರಿಕೆ ಘಟಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಕೂಡ ಪರಿಸ್ಥಿತಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.
ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ತಪ್ಸಮ್ ಎಂಬುವವರಿಗೆ ಸೇರಿದ ಸ್ಪಾರ್ಕರ್ ತಯಾರಿಕೆ ಘಟಕವಾಗಿದ್ದು, ಈಗಾಗಲೇ ಹದಿನೈದು ಜನರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮದ್ದಿನ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದು ಬೈಕ್ ಕೂಡ ಭಸ್ಮವಾಗಿದೆ. ಅಗ್ನಿ ಅವಘಡದಲ್ಲಿ 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಇನ್ನೂ ನಾಲ್ಕೈದು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಶಂಕೆ ಕೂಡ ವ್ಯಕ್ತವಾಗಿದೆ.
ಈಗಾಗಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಭುರಾಮ್, ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಗೋಪಾಲ ಬ್ಯಾಕೋಡ ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ.