ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಮೂರೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಪ್ರಕರಣ ತನಿಖೆಯಲ್ಲಿ ಹಿಂದೆ ಬಿದ್ದಿಲ್ಲ, ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಈ ಮೂರೂ ಪ್ರಕರಣಗಳನ್ನು ಕೇವಲ ಕೊಲೆಯಾಗಿ ನೋಡುವುದಿಲ್ಲ, ನಾವು ಇನ್ನು ಕೆಲವೇ ದಿನಗಳಲ್ಲಿ ಏನು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಾದುನೋಡಿ ಎಂದರು.
ಕಾಂಗ್ರೆಸ್ ನಾಯಕರು ರಾಜಕೀಯ ಹೇಳಿಕೆ ನೀಡಬಹುದು, ಸರ್ಕಾರ ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡುತ್ತಿದೆ. ಈ ವಿಷಯದಲ್ಲಿ ಯಾವ ಸಚಿವರೂ ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ, ಸಮರ್ಥವಾಗಿ ಎದುರಿಸುತ್ತಿದ್ದೇವೆ ಎಂದರು. ಸಿದ್ದರಾಮಯ್ಯ ಹೇಳಿಕೆ ಕುರಿತು, ಸಿದ್ದರಾಮಯ್ಯ ಹೇಳಿದ್ದು ವೇದವಾಕ್ಯವಲ್ಲ, ನಾವು ಸರ್ಕಾರದವರು ಏನು ಮಾಡಿದ್ದೇವೆ ಅನ್ನುವುದು ಜನರ ಮುಂದಿದೆ ಎಂದು ಹೇಳಿದರು.