ಬೆಂಗಳೂರು : ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲಾತಿ ಪ್ರಕಟ ಮಾಡುವ ಮೂಲಕ ಕಾನೂನು ಮೀರಿ ಸರ್ಕಾರ ನಡೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಚೇರಿ ಎಂದು ನಾಮಕರಣ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ರಾಮಲಿಂಗಾ ರೆಡ್ಡಿ ಸಂಸದ ಡಿಕೆ ಸುರೇಶ್ ಹಾಗೂ ಮತ್ತಿತರ ಮುಖಂಡರು ವಿಕಾಸಸೌಧದ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಘೋಷಣೆ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಇನ್ನು, ನೇರವಾಗಿ ಹೋರಾಟ ಮಾಡಿದರೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬುದಕ್ಕೆ ಬಿಜೆಪಿಯ ಈ ನಡೆ ಸಾಕ್ಷಿ. ಮೀಸಲಾತಿಯನ್ನು ವಾಪಸ್ ಪಡೆಯಬೇಕು. ಮೀಸಲಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಏನೇ ಮಾಡಿದರೂ ಚುನಾವಣೆಯಲ್ಲಿ ಪಾಠ ಕಲಿಸ್ತಾರೆ ಎಂದರು.