ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ. ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.