ಬೆಳಗಾವಿ: ರಾಜ್ಯದಲ್ಲಿ ಜನಸಂಕಲ್ಪ ಯಾತ್ರೆ ನಡೆಯುತ್ತಿರುವಾಗಲೇ ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಖಾಲಿ ಇರುವ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವೇ ದೆಹಲಿಗೆ ಭೇಟಿ ನೀಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆಗೆ ಮಾತುಕತೆ ನಡೆಸಲಾಗುವುದ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಮೊದಲು ಮಾತುಕತೆ ನಡೆಸುತ್ತೇನೆ. ಆ ಬಳಿಕ ನಿರ್ಣಯ ಕೈಗೊಳ್ಳುತ್ತೇನೆ. ನಿರ್ಣಯ ಕೈಗೊಂಡ ಸಂದರ್ಭದಲ್ಲಿ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದು ಗೊತ್ತಾಗಲಿದೆ ಎಂದು ಸಿಎಂ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಶುಭಸುದ್ದಿ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ಇನ್ನು ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆಯಿಂದ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ಹಲವು ಕನ್ನಡ ಭವನಗಳು ಪ್ರಸ್ತುತ ಇವೆ. ಯಾತ್ರಿಗಳ ನಿವಾಸಗಳೂ ಅಲ್ಲಿವೆ. ಇಂತಹ ವಿಚಾರದಲ್ಲಿ ರಾಜ್ಯ ಮತ್ತು ಭಾಷೆಗಳ ಮೂಲಕ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.