ಶಿವಮೊಗ್ಗ : ಮತದಾರರ ಪಟ್ಟಿ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡ್ತಿದೆ. ಮುಂಬರುವ ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡು ಕಾಂಗ್ರೆಸ್ ಈ ರೀತಿ ಆರೋಪ ಮಾಡ್ತಿದೆ. ಮುಖ್ಯಮಂತ್ರಿಯವರು ಇದಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಸೋಲನ್ನು ಅವರು ಒಪ್ಪಿಕೊಂಡು ಈ ರೀತಿ ಆರೋಪ ಮಾಡ್ತಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಕಾಂಗ್ರೆಸ್ ಮುಖಂಡರಿಗೆ ಇದು ಶೋಭೆ ತರುವುದಿಲ್ಲ. ಇಷ್ಟಾದರೂ ಏನಾದರೂ ಲೋಪದೋಷ ಇದ್ದರೆ ಸರಿಪಡಿಸುವುದಾಗಿ ಸಿಎಂ ಹೇಳಿದ್ದಾರೆ.
ಇನ್ನು, ಸೂಕ್ತ ಸಾಕ್ಷ್ಯಾಧಾರ ಇದ್ದರೆ ಕೊಡಿ ತನಿಖೆ ಮಾಡಿಸೋಣ ಎಂದು ಸಿಎಂ ತಿಳಿಸಿದ್ದಾರೆ. ಕಾಂಗ್ರೆಸ್ನವರಿಗೆ ಈಗಾಗಲೇ ಸೋಲು ಖಚಿತ ಎಂಬುದು ತಿಳಿದಿದೆ. ಸೋಲು ಖಚಿತ ಎಂಬ ನಿರ್ಧಾರದಿಂದ ಈ ರೀತಿ ಆರೋಪ ಮಾಡ್ತಿದ್ದಾರೆ. ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.