ಬೆಂಗಳೂರು : ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಈ ಬಗ್ಗೆ ಸ್ವತಃ ಸುಮಲತಾ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಿರ್ಧರಿಸಿದ್ದರಿಂದ ಕಾಂಗ್ರೆಸ್ ಟಿಕೆಟ್ ಸುಮಲತಾ ಅವರ ಕೈ ತಪ್ಪಿತ್ತು. ಕಾಂಗ್ರೆಸ್ ಟಿಕೆಟ್ ಸಿಗದೇ ಇದ್ದರೂ ನಾನು ಎಲೆಕ್ಷನ್ನಲ್ಲಿ ಕಂಟೆಸ್ಟ್ ಮಾಡಿಯೇ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಆದರೆ, ಅವರು ಕೊನೇ ಕ್ಷಣದಲ್ಲಿ ಮನಸ್ಸು ಬದಲಾಯಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಬಳಿಕ ಸುಮಲತಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ಅದಕ್ಕೆ ಪೂರಕವಾಗಿ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರೂ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರನ್ನು ಭೇಟಿ ಆಗಿದ್ದರು.
ಮಾರ್ಚ್ 18ಕ್ಕೆ ತನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದ ಸುಮಲತಾ ಅವರು ಇಂದು ಪ್ರೆಸ್ಮೀಟ್ ನಡೆಸಿ ತಮ್ಮ ನಿರ್ಧಾರ ಸ್ಪಷ್ಟಪಡಿಸಿದ್ರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ ಸುಮಲತಾ ಅವರು, ಮಾರ್ಚ್ 20ಕ್ಕೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.
ಪ್ರೆಸ್ಮೀಟ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಮತ್ತಿತರರು ಉಪಸ್ಥಿತರಿದ್ದರು.
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ..!
TRENDING ARTICLES